ಬೆಳಗಾವಿ-10: ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರನ್ನು ಹಲಗಾ ಗ್ರಾಮದ ಹೆದ್ದಾರಿ ಪಕ್ಕ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಲವಾರು ಶಾಸಕರು, ಎಂಎಲ್‌ಸಿಗಳು ಮತ್ತು ಪಕ್ಷದ ಇತರ ಹಿರಿಯ ನಾಯಕರ ನೇತೃತ್ವದಲ್ಲಿ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾಕಾರರ ಬೃಹತ್ ಗುಂಪು ಜಮಾಯಿಸಿತು. ನಂತರ ಮಾಲಿನಿ ಸಿಟಿಯಿಂದ ಸುವರ್ಣಸೌಧದ ಕಡೆಗೆ ಪ್ರತಿಭಟನೆ ರ‌್ಯಾಲಿ ತೆರಳಿತು ಸುವರ್ಣ ಸೌಧ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ರೈತರು ಪಾದಯಾತ್ರೆಯಲ್ಲಿ ಭಾಗವಹಿಸಿ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಹಲಾಗ ಗ್ರಾಮದ ಬಳಿ ಸುವರ್ಣಸೌಧ ಮುತ್ತಿಗೆ ಹಾಕಲು ಹೋರಟ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಬಿಜೆಪಿ ನಾಯಕರು, ‘ಉತ್ತರ ಕರ್ನಾಟಕದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಕ್ರೋಶ ಹೊರಹಾಕಿದರು.
ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಕಳವಳಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಮೆಕ್ಕೆಜೋಳ ರೈತರು ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ಸರಕಾರ ಇನ್ನೂ ಕಾರ್ಯಪ್ರವೃತ್ತವಾಗಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದರು.
