ಬೆಳಗಾವಿ-18: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಜನಪರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು.

ಮಹಾನಗರ ಪಾಲಿಕೆಯಲ್ಲಿ ನಡೆದ ಪರಿಷತ್ ಸಭೆ ಆರಂಭವಾದ ಬಳಿಕ ನಾಡಗೀತೆ ಮುಗಿದ ತಕ್ಷಣವೇ ಕಾಂಗ್ರೇಸ್ ಹಾಗೂ ಎಂಇಎಸ್ ಪಕ್ಷದ ಪಾಲಿಕೆ ಸದಸ್ಯರು ಸಭೆಯನ್ನು ತೊರೆದು ಹೊರಬಂದು ಪ್ರತಿಭಟನೆಗೆ ಮುಂದಾದರು. ತಮ್ಮ ಬೇಡಿಕೆಗಳಿಗೆ ಮೇಯರ್ ಹಾಗೂ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದ ಅವರು, ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ನಗರದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಪುನಃ ಪುನಃ ಗಮನ ಸೆಳೆದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲವೆಂದು ವಿರೋಧ ಪಕ್ಷದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಜನರು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಈ ಕುರಿತು ಸಮರ್ಪಕ ಚರ್ಚೆಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ ಸದಸ್ಯರು, ಪಾಲಿಕೆ ಒಳಗಡೆವೇ ಕುಳಿತು ಪ್ರತಿಭಟನೆ ಮುಂದುವರೆಸಿದರು.
