27/05/2026
IMG-20260526-WA0015

ಬೆಳಗಾವಿ-26: ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರುವ ತೀವ್ರ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ದವಸ ಧಾನ್ಯಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಸರ್ವರ್ ಕೈಕೊಡುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನ್ಯಾಯಬೆಲೆ ಅಂಗಡಿ ಮಾಲೀಕರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿಭಟನೆಯಲ್ಲಿ ಭಾಗವಹಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರ್ಲಕ್ಷ್ಯದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ತಕ್ಷಣ ಸರ್ವರ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿದರು.

ಈ ಕುರಿತು ಮಾತನಾಡಿದ ಸಂಘದ ಮುಖಂಡ ರಾಜಶೇಖರ್ ತಳವಾರ, “ತಿಂಗಳ ಆರಂಭದಿಂದಲೇ ಸರ್ವರ್ ಸಮಸ್ಯೆ ತೀವ್ರವಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಸರಿಯಾಗಿ ನಡೆಯುತ್ತಿಲ್ಲ. ಬಡವರು ಬೆಳಿಗ್ಗೆಯಿಂದ ಸಂಜೆವರೆಗೆ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಂತರೂ ಅಕ್ಕಿ ಪಡೆಯಲು ಸಾಧ್ಯವಾಗುತ್ತಿಲ್ಲ. ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ನಮ್ಮ ಮೇಲೆಯೇ ಆಕ್ರೋಶ ಹೊರಹಾಕುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಥಂಬ್ ದೃಢೀಕರಣ ಪ್ರಕ್ರಿಯೆಯೂ ಸಾರ್ವಜನಿಕರ ತೊಂದರೆಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು. “ಒಬ್ಬ ಫಲಾನುಭವಿಯಿಂದ ಎರಡು ಬಾರಿ ಥಂಬ್ ಪಡೆಯುವ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಸಮಯ ವ್ಯರ್ಥವಾಗುತ್ತಿದೆ. ಒಂದು ಬಾರಿ ಥಂಬ್ ಬರುವುದೇ ಕಷ್ಟವಾಗಿರುವಾಗ ಎರಡು ಬಾರಿ ಪಡೆಯುವುದು ಅಸಾಧ್ಯವಾಗುತ್ತಿದೆ. ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಕಾರ್ಮಿಕರು ಗಂಟೆಗಟ್ಟಲೆ ಕಾಯುವಂತಾಗಿದೆ” ಎಂದು ದೂರಿದರು.

ಪ್ರಸ್ತುತ ಜಿಲ್ಲೆಯಲ್ಲಿ ಕೇವಲ ಶೇ. 40 ರಷ್ಟು ಅಕ್ಕಿ ಮಾತ್ರ ವಿತರಣೆ ಆಗಿದ್ದು, ಇನ್ನೂ ಶೇ. 60 ರಷ್ಟು ಪಡಿತರ ವಿತರಣೆ ಬಾಕಿಯಿದೆ ಎಂದು ಸಂಘದ ಸದಸ್ಯರು ತಿಳಿಸಿದರು. ಸರ್ವರ್ ಸಮಸ್ಯೆ ಮುಂದುವರಿದರೆ ಬಡ ಕುಟುಂಬಗಳು ಆಹಾರ ಧಾನ್ಯದಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ಎಚ್ಚರಿಸಿದರು.

ಮುಂದಿನ ತಿಂಗಳಿನಿಂದ ಫಲಾನುಭವಿಗಳಿಂದ ಕೇವಲ ಒಂದೇ ಬಾರಿ ಥಂಬ್ ಪಡೆಯುವ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ತಾಂತ್ರಿಕ ಸಮಸ್ಯೆ ನಿವಾರಣೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಹಾಗೂ ಸರ್ವರ್ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ನ್ಯಾಯಬೆಲೆ ಅಂಗಡಿ ಮಾಲೀಕರು, ಸಂಘದ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!