02/06/2026
IMG-20260601-WA0045

ಬೆಳಗಾವಿ-01 : ರಾಜ್ಯ ರಾಜಕೀಯದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ, ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ದೊರೆಯಲಿ, ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸೋಮವಾರ ನಗರದ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹಜರತ್ ಸೈಯ್ಯದ ಮುರಾದಲಿ ಶಾ ದರ್ಗಾದಲ್ಲಿ, ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತೆ ಆಯಿಶಾ ಸನದಿ ಅವರ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಜೈ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದರ್ಗಾದ ಪವಿತ್ರ ಸಮಾಧಿಗೆ ಹೂವಿನ ಹೊದಿಕೆ (ಚಾದರ್) ಅರ್ಪಿಸಿದ ಭಕ್ತರು, ರಾಜ್ಯದ ಜನಪರ ನಾಯಕನಾಗಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಇನ್ನಷ್ಟು ರಾಜಕೀಯ ಶಕ್ತಿ ಹಾಗೂ ಉನ್ನತ ಜವಾಬ್ದಾರಿಗಳು ದೊರೆಯಲಿ ಎಂದು ಸಾಮೂಹಿಕವಾಗಿ ದುವಾ ಮಾಡಿದರು. ರಾಜ್ಯದ ಅಭಿವೃದ್ಧಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳುವ ನಿಟ್ಟಿನಲ್ಲಿ ಅವರು ಮಹತ್ವದ ಪಾತ್ರ ವಹಿಸಲಿ ಎಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಆಯೇಶಾ ಸನದಿ, “ಸತೀಶ್ ಜಾರಕಿಹೊಳಿ ಅವರು ಎಲ್ಲ ವರ್ಗಗಳ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಜನನಾಯಕರು. ಹಿಂದುಳಿದವರು, ಅಲ್ಪಸಂಖ್ಯಾತರು, ರೈತರು ಹಾಗೂ ಕಾರ್ಮಿಕರ ಪರವಾಗಿ ಸದಾ ಧ್ವನಿಯಾಗಿದ್ದಾರೆ. ಅವರ ಸೇವೆ ಮತ್ತು ಅನುಭವವನ್ನು ಪರಿಗಣಿಸಿ ಪಕ್ಷದ ಹೈಕಮಾಂಡ್ ಅವರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಂತಹ ಉನ್ನತ ಹುದ್ದೆಗಳನ್ನು ನೀಡಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ” ಎಂದು ಹೇಳಿದರು.
ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖಂಡರು ಮತ್ತು ಕಾರ್ಯಕರ್ತರು, ಸತೀಶ್ ಜಾರಕಿಹೊಳಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದ್ದು, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿವಿಧ ಸಮುದಾಯಗಳ ಜನರ ನಡುವೆ ಉತ್ತಮ ಸಮನ್ವಯ ಮತ್ತು ಸಾಮಾಜಿಕ ಸಾಮರಸ್ಯ ಬೆಳೆಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ದರ್ಗಾದಲ್ಲಿ ನಡೆದ ಈ ವಿಶೇಷ ಪ್ರಾರ್ಥನೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆಗಳ ನಡುವೆ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳ ಆಶಯವನ್ನು ಮತ್ತೊಮ್ಮೆ ಹೊರಹಾಕಿದೆ.
ಈ ವೇಳೆ ಮುಸ್ಲಿಂ ಸಮುದಾಯದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಜೈ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು , ಕಾರ್ಯಕರ್ತರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!