02/06/2026
IMG-20260601-WA0047

ಬೆಳಗಾವಿ-01 : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಬೆಳಗಾವಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹರಳಯ್ಯ ಸಮಗಾರ ಸಮಾಜದ ಮುಖಂಡರು, ದಲಿತ ಸಮುದಾಯದ ಪ್ರತಿನಿಧಿಗಳು ಹಾಗೂ ಬೆಂಬಲಿಗರು ಒತ್ತಾಯಿಸಿದರು.
ಸೋಮವಾರ ನಗರದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಸಮಾಜದ ಮುಖಂಡ ಲಕ್ಷ್ಮಣ ಮಾಚಕನುರ್ ಹಾಗೂ ಲಕ್ಷ್ಮಣ ಕಾಳೆ, ಹಲವು ವರ್ಷಗಳಿಂದ ಬೆಳಗಾವಿ ನಗರ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರಕಿಲ್ಲ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ನಗರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಆಸೀಫ್ ಸೇಠ್ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕನಾಗಿ ಗುರುತಿಸಿಕೊಂಡಿದ್ದು, ನಗರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಪಕ್ಷದ ಸಂಘಟನೆಗಾಗಿ ದುಡಿದಿರುವ ಅವರು, ಪಕ್ಷದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಮರ್ಥ ನಾಯಕನಾಗಿ ಗುರುತಿಸಿಕೊಂಡಿರುವ ಅವರಿಗೆ ಸಚಿವ ಸ್ಥಾನ ನೀಡಲು ಎಲ್ಲ ರೀತಿಯ ಅರ್ಹತೆಗಳಿವೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಬೆಳಗಾವಿ ಜಿಲ್ಲೆಯ ರಾಜಕೀಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದಲೂ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ. ಅವರು ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿರುವುದರ ಜೊತೆಗೆ ದಲಿತ ಹಾಗೂ ಹಿಂದುಳಿದ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದರು.
ಇದೇ ವೇಳೆ ರಾಜ್ಯ ಕಾಂಗ್ರೆಸ್ ನಾಯಕತ್ವ ಹಾಗೂ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ ಮುಖಂಡರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸೀಫ್ ಸೇಠ್ ಅವರ ಸೇವೆ, ಅನುಭವ ಮತ್ತು ಪಕ್ಷ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ರಾಜೇಂದ್ರ ಬಿಡ್ಕರ್ ದೇವೇಂದ್ರ ಕಾಂಬ್ಳೆ, ಪರಶುರಾಮ ತೊರೆ, ಸಾಗರ ಲಾಟ್, ಶ್ರೀದೇವಿ ಕಾಂಬ್ಳೆ, ಅನಿತಾ ಕಾಳೆ, ಹರಾಲ್ಲ್ಯಾ ಸಮಗಾರ ಸಮಾಜದ ಹಿರಿಯರು, ಮುಖಂಡರು, ಮಹಿಳೆಯರು ಹಾಗೂ ಬೆಂಬಲಿಗರು ಸೇರಿದಂತೆ ಹಲವರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

error: Content is protected !!