16/06/2026
IMG-20260613-WA0042

ಬೆಳಗಾವಿ-13: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ವೆಂಕಟೇಶ ಪ್ರಸಾದ್ ಅವರು ಬೆಳಗಾವಿಯಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ಬೆಳಗಾವಿಗೆ ಕ್ರಿಕೆಟ್ ಪಂದ್ಯಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಮಹಾರಾಜ ಟ್ರೋಫಿ ಟೂರ್ನಿಯ ಉದ್ಘಾಟನೆ ಮಾಡಿರುವುದಾಗಿ ತಿಳಿಸಿದ ಅವರು, ಈ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಕೂಡ ಭಾಗವಹಿಸಿದ್ದರು ಎಂದು ಹೇಳಿದರು. ಅಲ್ಲದೆ, ಹುಬ್ಬಳ್ಳಿಯ ಯುವಕ ಅವಿನಾಶ ವೈದ್ಯ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಯಲ್ಲಿ ಮ್ಯಾನೇಜರ್ ಆಗಿ ಆಯ್ಕೆಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಾರಾಜ ಟ್ರೋಫಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ತಂಡಗಳನ್ನು ಸೇರಿಸುವ ಸಾಧ್ಯತೆಗಳಿದ್ದು, ಟೂರ್ನಿಯನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚಿಂತನೆ ನಡೆಯುತ್ತಿದೆ ಎಂದರು.

ಈ ವೇಳೆ ಬೆಳಗಾವಿಯ ಕೆಎಸ್‌ಸಿಎ ಮೈದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೆಂಕಟೇಶ ಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಅವಧಿಯಲ್ಲಿನ ನಿರ್ಧಾರಗಳ ಕುರಿತು ಈಗ ಪ್ರಶ್ನಿಸುವುದಕ್ಕಿಂತ, ಭವಿಷ್ಯದ ಅಭಿವೃದ್ಧಿಯತ್ತ ಗಮನ ಹರಿಸಬೇಕಾಗಿದೆ ಎಂದು ಹೇಳಿದರು. ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು, ರಾಜ್ಯದ ಯಾವುದೇ ಭಾಗದ ವಿರುದ್ಧ ತಾರತಮ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿಯಲ್ಲಿ ತಕ್ಷಣವೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸುವುದು ಸಾಧ್ಯವಿಲ್ಲದಿದ್ದರೂ, ಅಭ್ಯಾಸ ಪಂದ್ಯಗಳು ಹಾಗೂ ಬಿಸಿಸಿಐ ದೇಶೀಯ ಟೂರ್ನಿಗಳ ಪಂದ್ಯಗಳನ್ನು ಆಯೋಜಿಸಲು ಅವಕಾಶಗಳಿವೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಬೆಳಗಾವಿಗೆ ಹೆಚ್ಚಿನ ಕ್ರಿಕೆಟ್ ಚಟುವಟಿಕೆಗಳನ್ನು ತರಲು ಕೆಎಸ್‌ಸಿಎ ಬದ್ಧವಾಗಿದೆ ಎಂದರು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯ ಹೆಚ್ಚಳ ಹಾಗೂ ಸೌಲಭ್ಯಗಳ ಕುರಿತು ಮಾತನಾಡಿದ ಅವರು, ಕ್ರೀಡಾಂಗಣದ ಆಸನ ಸಾಮರ್ಥ್ಯ ಸುಮಾರು 33 ಸಾವಿರ ಇದ್ದರೂ, ಎಲ್ಲ ಪ್ರೇಕ್ಷಕರಿಗೂ 360 ಡಿಗ್ರಿಯಲ್ಲಿ ಪಂದ್ಯ ವೀಕ್ಷಣೆಯ ಅನುಕೂಲ ಇಲ್ಲ ಎಂದು ಹೇಳಿದರು. ಪ್ರಸ್ತುತ ಸುಮಾರು 27 ಸಾವಿರ ಪ್ರೇಕ್ಷಕರಿಗೆ ಮಾತ್ರ ಉತ್ತಮ ವೀಕ್ಷಣಾ ವ್ಯವಸ್ಥೆ ಲಭ್ಯವಿದ್ದು, ಕ್ರೀಡಾಂಗಣವನ್ನು ಆಧುನೀಕರಿಸುವ ಕಾರ್ಯಕ್ಕೆ ಕೆಎಸ್‌ಸಿಎ ಮುಂದಾಗಿದೆ ಎಂದರು.

ಚಿನ್ನಸ್ವಾಮಿ ಕ್ರೀಡಾಂಗಣವನ್ನು ಮತ್ತಷ್ಟು ಸುಧಾರಿಸಿ ಸುಮಾರು 55 ಸಾವಿರ ಪ್ರೇಕ್ಷಕರ ಸಾಮರ್ಥ್ಯಕ್ಕೆ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಸಹಕಾರ ಅಗತ್ಯವಾಗಿದ್ದು, ಸರ್ಕಾರದಿಂದ ಉತ್ತಮ ಬೆಂಬಲ ದೊರೆಯುತ್ತಿದೆ ಎಂದು ತಿಳಿಸಿದರು.

ಇನ್ನೂ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಏಕದಿನ (ODI) ಹಾಗೂ ಡಿಸೆಂಬರ್‌ನಲ್ಲಿ ಟಿ-20 ಅಂತರರಾಷ್ಟ್ರೀಯ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ ಅವರು, ಆ ಯೋಜನೆಗೆ ಕೆಎಸ್‌ಸಿಎಗೆ ನೇರ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಒಟ್ಟಾರೆ, ಬೆಳಗಾವಿಯಲ್ಲಿ ಕ್ರಿಕೆಟ್ ಚಟುವಟಿಕೆಗಳನ್ನು ಹೆಚ್ಚಿಸುವ ಬಗ್ಗೆ ಕೆಎಸ್‌ಸಿಎ ಸಕಾರಾತ್ಮಕ ನಿಲುವು ಹೊಂದಿದ್ದು, ಮುಂದಿನ ದಿನಗಳಲ್ಲಿ ದೇಶೀಯ ಹಾಗೂ ಅಭ್ಯಾಸ ಪಂದ್ಯಗಳ ಆಯೋಜನೆಗೆ ಅವಕಾಶ ಸಿಗುವ ನಿರೀಕ್ಷೆ ಮೂಡಿದೆ.

ಈ ಪತ್ರಿಕಾ ಗೋಷ್ಠಿಯಲ್ಲಿ ಅವಿನಾಶ್ ಪೋತದಾರ್ ವಿಲಾಸ್ ಜೋಶಿ ಹಾಗೂ ಬಿಕೆ ಮೋಡಲ್ ಶಿಕ್ಷಕ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!