19/06/2026
IMG-20260616-WA0009

ಬೆಳಗಾವಿ-18: ರಸ್ತೆ ಅಪಘಾತಗಳಲ್ಲಿ ಸಂಭವಿಸುತ್ತಿರುವ ಸಾವು-ನೋವುಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ “ಹೆಲ್ಮೆಟ್ ಕಡ್ಡಾಯ” ಜಾಗೃತಿ ಅಭಿಯಾನವನ್ನು ಜಿಲ್ಲಾದ್ಯಂತ ಹಮ್ಮಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಬೈಕ್ ಸವಾರರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ವೇಳೆ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದರಿಂದ ಆಗುವ ಸುರಕ್ಷತಾ ಪ್ರಯೋಜನಗಳ ಕುರಿತು ಅರಿವು ಮೂಡಿಸಲಾಯಿತು.
ಚೆನ್ನಮ್ಮ ವೃತ್ತದಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು, ಹೆಲ್ಮೆಟ್ ಧರಿಸುವಂತೆ ಪೊಲೀಸರು ಮನವಿ ಮಾಡಿದರು. ಅಲ್ಲದೆ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಸವಾರರ ವಿರುದ್ಧ ಸಂಚಾರ ನಿಯಮಗಳ ಪ್ರಕಾರ ದಂಡ ವಿಧಿಸಲಾಯಿತು.
ರಸ್ತೆ ಸುರಕ್ಷತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಹೆಲ್ಮೆಟ್ ಜೀವ ರಕ್ಷಕ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು. ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳಿಂದಾಗುವ ಸಾವು-ನೋವುಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದಾಗಿದೆ ಎಂದು ಅವರು ಹೇಳಿದರು.
ಪೊಲೀಸ್ ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಸ್ತೆ ಸುರಕ್ಷತೆಯ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ನಾಗರಿಕರು ಅಭಿಪ್ರಾಯಪಟ್ಟರು. ಹೆಲ್ಮೆಟ್ ಕಡ್ಡಾಯ ಅಭಿಯಾನವನ್ನು ಮುಂದುವರಿಸುವ ಮೂಲಕ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *

error: Content is protected !!