ಬೆಳಗಾವಿ-25: ಬಸವಪರ ಸಂಘಟನೆಗಳ ಒಕ್ಕೂಟ, ಬೆಳಗಾವಿ ವತಿಯಿಂದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಜೂನ್ 28 ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ “ಬಸವಾದಿ ಶರಣರ ಹಿಂದೂ ಸಮಾವೇಶ”ಕ್ಕೆ ಅನುಮತಿ ನೀಡಬಾರದು ಹಾಗೂ ಸಮಾವೇಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕೆ ಬಸವಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಮನವಿ ಮಾಡಿಕೊಂಡರು.
ಬುಧವಾರ ಡಿಸಿ ಕಛೇರಿಗೆ ಆಗಮಿಸಿದ ಬಸವಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ವಿವರಿಸಿದ ಅವರು, ಕನ್ನೇರಿ ಮಠದ ಶ್ರೀಗಳು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಯೋಜಿಸಿದ ಸಭೆಗಳಲ್ಲಿ ಲಿಂಗಾಯತ ಮಠಾಧೀಶರು ಹಾಗೂ ಲಿಂಗಾಯತ ಧುರೀಣರ ಕುರಿತು ಅವಹೇಳನಕಾರಿ, ಅಸಂವಿಧಾನಿಕ ಹಾಗೂ ಅಸಭ್ಯ ಭಾಷೆಯನ್ನು ಬಳಸಿದ್ದು, ಇದರಿಂದ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಬಸವಣ್ಣನವರ ತತ್ವ, ವಚನ ಸಾಹಿತ್ಯ ಮತ್ತು ಬಸವಾದಿ ಶರಣರ ಆಶಯಗಳಿಗೆ ವಿರುದ್ಧವಾದ ಹೇಳಿಕೆಗಳನ್ನು ನೀಡಿರುವುದಾಗಿ ಸಂಘಟನೆಗಳು ದೂರಿವೆ.
ಬಸವಣ್ಣನವರ ಕಾರ್ಯಕ್ಷೇತ್ರವಾಗಿರುವ ಹಾಗೂ ಅನುಭವ ಮಂಟಪ ಸ್ಥಾಪನೆಯಾದ ಪವಿತ್ರ ಸ್ಥಳವಾದ ಬಸವಕಲ್ಯಾಣದಲ್ಲಿ ಇಂತಹ ಸಮಾವೇಶ ನಡೆಸುವುದರಿಂದ ಸಮಾಜದಲ್ಲಿ ಅಶಾಂತಿ, ವೈಷಮ್ಯ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಧ್ಯಪ್ರವೇಶಿಸಿ ಸಮಾವೇಶವನ್ನು ಪ್ರತಿಬಂಧಿಸಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ರಾಜ್ಯದಲ್ಲಿ ಶಾಂತಿ ಕದಡುವ ಹಾಗೂ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಕನ್ನೇರಿ ಶ್ರೀಗಳ ಕರ್ನಾಟಕ ಪ್ರವೇಶಕ್ಕೂ ನಿಷೇಧ ಹೇರಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಈ ವೇಳೆ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಅಶೋಕ ಬೆಂಡಿಗೇರಿ, ಲಿಂಗಾಯತ ಸಂಘಟನೆಯ ಅಧ್ಯಕ್ಷ ಈರಣ್ಣ ದೇಯನ್ನವರ, ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಅಶೋಕ ಮಳಗಲಿ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಜಿ. ಸಿದ್ದಾಳ ಹಾಗೂ ಉಪಾಧ್ಯಕ್ಷ ಮುರುಗೇಶ ಶಿವಪೂಜಿ ಹಲವು ಬಸವಪರ ಮುಖಂಡರು ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
