23/07/2026
IMG-20260722-WA0009

ಬೆಳಗಾವಿ-22: ಕರ್ತವ್ಯ ನಿರತ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪಾಲಿಕೆ ಆಯುಕ್ತರ ಮೂಲಕ ಮನವಿ ಪತ್ರ ಸಲ್ಲಿಸಿದರು.

ಮನವಿಯಲ್ಲಿ, ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕೇಂದ್ರ ನಗರ ಪಾಲಿಕೆಯ ಇಬ್ಬರು ಮಹಿಳಾ ಇಂಜಿನಿಯರ್‌ಗಳು, ಜೆಸಿಬಿ ಚಾಲಕ ಹಾಗೂ ಟ್ರ್ಯಾಕ್ಟರ್ ಸಹಾಯಕರ ಮೇಲೆ ಬೀದಿಬದಿ ವ್ಯಾಪಾರಿಗಳು ಮತ್ತು ಕೆಲವು ಸಂಘಟನೆಗಳ ಸದಸ್ಯರು ಅಮಾನುಷವಾಗಿ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಲಾಗಿದೆ.

ಕಾರ್ಯಾಚರಣೆ ವೇಳೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ತಳ್ಳಿ, ಹೆಲ್ಮೆಟ್, ಪ್ಲಾಸ್ಟಿಕ್ ಕುರ್ಚಿ ಸೇರಿದಂತೆ ವಿವಿಧ ವಸ್ತುಗಳಿಂದ ಹಲ್ಲೆ ನಡೆಸಲಾಗಿದೆ. ಅಲ್ಲದೆ, ಸ್ಥಳದಿಂದ ಹಿಂದಿರುಗುತ್ತಿದ್ದ ಸಿಬ್ಬಂದಿಯನ್ನು ಬೆನ್ನಟ್ಟಿ ಥಳಿಸಲಾಗಿದ್ದು, ಮಹಿಳಾ ಸಿಬ್ಬಂದಿಯ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿರುವ ಘಟನೆ ಕರ್ತವ್ಯ ನಿರತ ಸಿಬ್ಬಂದಿಯ ಸುರಕ್ಷತೆಗೆ ಗಂಭೀರ ಆತಂಕ ಮೂಡಿಸಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ. ಜೊತೆಗೆ, ರಾಜ್ಯದ ಯಾವುದೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿಕ್ರಮಣ ತೆರವು ಸೇರಿದಂತೆ ಯಾವುದೇ ಕಾರ್ಯಾಚರಣೆ ಕೈಗೊಳ್ಳುವ ಸಂದರ್ಭದಲ್ಲಿ ಪಾಲಿಕೆ ಸಿಬ್ಬಂದಿಗೆ ಕಡ್ಡಾಯವಾಗಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸಂಬಂಧಿಸಿದ ಇಲಾಖೆಗೆ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಜೀವ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ಶಾಖೆಯ ಅಧಿಕಾರಿಗಳು ಸೇರಿದಂತೆ ಸಮಸ್ತ ಸಿಬ್ಬಂದಿ ಮನವಿಯಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!