ಬೆಳಗಾವಿ-೧೬: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಶೀರ್ವಾದದಿಂದ ಬೆಳಗಾವಿ ಬುಡಾ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದು, ಬೆಳಗಾವಿ ನಗರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ನೂತನ ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ತಿಳಿಸಿದರು.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಂದ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರ ಸಹಕಾರದಿಂದ ಬೆಳಗಾವಿ ಬುಡಾ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು ಸಂತಸ ತಂದಿದೆ ಎಂದರು.
ಇದೇ ವೇಳೆ ಬೆಳಗಾವಿ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಪುಷ್ಪಗುಚ್ಛ ನೀಡಿ ಸತ್ಕರಿಸಿದರು.
ಶುಕ್ರವಾರ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ರಾಮಯ್ಯ ಆದೇಶ ಹೊರಡಿಸಿದ್ದರು.
ಈ ಸಂದರ್ಭದಲ್ಲಿ ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ರಾಜಾ ಸಲೀಂ, ಮಹಾವೀರ್ ಮೋಹಿತೆ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.