ಬೆಳಗಾವಿ-೨೯: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಸವದತ್ತಿ ಹಾಗೂ ರಾಮದುರ್ಗ ವಿಧಾನಸಭಾ ಕ್ಷೇತ್ರಗಳ ನೂರಾರು ಮುಖಂಡರು ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರಿಗೆ ಬೆಂಬಲ ಸೂಚಿಸಿದರು.
ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಮುಖಂಡರು ಆಗಮಿಸಿದ್ದರು. ಕಾಂಗ್ರೆಸ್ ಪಕ್ಷದ ಸಾಧನೆ, ಅಭಿವೃದ್ಧಿ ಯೋಜನೆಗಳು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಹಿನ್ನೆಲೆಯಲ್ಲಿ ನಾವು ಈ ಬಾರಿ ಮೃಣಾಲ್ ಹೆಬ್ಬಾಳಕರ್ ಅವರನ್ನು ಬೆಂಬಲಿಸಬೇಕೆಂದು ನಿರ್ಧರಿಸಿದ್ದೇವೆ. ಜೊತೆಗೆ ನಮ್ಮ ನಮ್ಮ ಗ್ರಾಮಗಳಲ್ಲಿ ಸಹ ಜನರಿಗೆ ತಿಳಿವಳಿಕೆ ನೀಡಲಾಗುವುದು. ಹಿಂದೆಲ್ಲ ಬಿಜೆಪಿ ಬೆಂಬಲಿಸುತ್ತಿದ್ದವರು ಸಹ ಈ ಬಾರಿ ಹೊರಗಿನ ಅಭ್ಯರ್ಥಿ ನಿಲ್ಲಿಸಿದ್ದರಿಂದ ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮೃಣಾಲ ಹೆಬ್ಬಾಳಕರ್ ಅವರು ಚುನಾವಣೆಯ ರೂಪರೇಷೆಗಳ ಕುರಿತಾಗಿ ಜನರೊಂದಿಗೆ ಚರ್ಚಿಸಿದರು. ಈ ಬಾರಿ ಎಲ್ಲರೂ ಬೆಂಬಲಿಸುವ ಮೂಲಕ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು. ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.