ಬೆಳಗಾವಿ-೦೭:ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್.ಯು.ಸಿ.ಐ(ಕಮ್ಯುನಿಸ್ಟ್) ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಲಕ್ಷ್ಮಣ ಜಡಗನ್ನವರ ಅವರನ್ನು ಕಣಕ್ಕಿಳಿಸುತ್ತಿದ್ದೇವೆ ಎಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸೆಕ್ರಟರಿಯೇಟ್ ಸದಸ್ಯ ಕಾಮ್ರೆಡ್ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟಿ ಮಾಡಿದೆ. 2014ರಲ್ಲಿ ಬಿಜೆಪಿ ದನಿ ಎತ್ತಿದ ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ. ಅಬ್ಬರದ ಪ್ರಚಾರ ಮಾಡಿದ ‘ಗುಜರಾತ್ ಮಾದರಿ’ ಅದೃಶ್ಯವಾಗಿದೆ. ಕಪ್ಪುಹಣ, ಸ್ವಿಸ್ ಬ್ಯಾಂಕ್ ಖಾತೆಗಳ ಬಗ್ಗೆ ಇರಲಿ, ಎಸ್‌ಬಿಐಯಲ್ಲಿರುವ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡದಂತೆ ತಡೆಯಲು ಸರ್ವ ಪ್ರಯತ್ನ ಮಾಡುತ್ತಿದೆ. ಹಸಿವಿನ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಪಾತಾಳದಲ್ಲಿದೆ. ಆದರೆ ಪ್ರಧಾನಿ ಮೋದಿಯವರು ಈಗ ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನವರು ಇಷ್ಟು ವರ್ಷ ಆಳ್ವಿಕೆ ನಡೆಸಿ ದೇಶವನ್ನು ಹಾಳುಗೆಡವಿ ಅಭಿವೃದ್ಧಿಯ ಪಥಕ್ಕೆ ತರಲು ಇನ್ನೂ ಒಂದು ಅವಕಾಶ ಕೊಡಿ ಎಂದು ಕೇಳುತ್ತಾರೆ. ಹಿಂದೆ ಕಾಂಗ್ರೆಸ್ ಆಳ್ವಿಕೆಯಲ್ಲಿ ಅವರು ಇದೇ ರೀತಿ ಬ್ರಿಟಿಷರ ಮೇಲೆ ಗೂಬೆ ಕೂರಿಸುತ್ತಿದ್ದರು. ಮೋದಿಯವರ ಆಳ್ವಿಕೆಯಲ್ಲಿ ಅಂಬಾನಿ, ಅದಾನಿಗಳು ವಿಕಸಿತಗೊಂಡು ಜಗತ್ತಿನ ಅತಿ ಶ್ರೀಮಂತ ಬಂಡವಾಳಶಾಹಿಗಳಾಗಿದ್ದಾರೆ. ಅಂತಹ ಆಧುನಿಕ ಬಿಲಿಯಾಧಿಪತಿಗಳ ಐಷಾರಾಮಿ ಕಾರುಗಳಿಗಾಗಿ ದುಬಾರಿ ಸುಂಕದ ಎಕ್ಸಪ್ರೆಸ್ ಹೈವೇಗಳನ್ನು ಜನರ ತೆರಿಗೆಯಲ್ಲಿ ನಿರ್ಮಿಸಲಾಗಿದೆ.
ಇನ್ನೊಂದೆಡೆ, ಜನರ ಮತವನ್ನು ಕೋಮುವಾದದ ಮೂಲಕ ಧ್ರುವೀಕರಣ ಮಾಡಲು ಮಂದಿರ, ಮಸೀದಿ, ಬಾವುಟ, ಸಿಎಎ ಮುಂತಾದ ಬಗೆಬಗೆಯ ದಾರಿಗಳನ್ನು ಬಿಜೆಪಿ ಹುಡುಕುತ್ತಿದೆ. ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ಚುನಾವಣಾ ಆಯುಕ್ತರ ನೇಮಕಾತಿ ಕಾಯಿದೆಗೆ ತಿದ್ದುಪಡಿ ತಂದಿದೆ.
ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಭಾರತದ ಶೋಷಿತ ದುಡಿಯುವ ವರ್ಗದ, ಬಡ ರೈತರ ಪರ್ಯಾಯವಾಗಿ ದೇಶದ ಎಡಪಕ್ಷಗಳು ಒಂದು ಒಕ್ಕೂಟದ ಮೂಲಕ ಜನ ಹೋರಾಟಗಳನ್ನು ಕಟ್ಟಬೇಕಾಗಿತ್ತು. ಚುನಾವಣೆಗಳು ಪರಿಹಾರವಲ್ಲ, ಸಮಾಜವಾದವೇ ನೈಜ ಪರಿಹಾರ ಎಂಬ ಪ್ರಚಾರವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ದುರಂತವೆಂದರೆ ಸಿಪಿಐ, ಸಿಪಿಐಎಂ ನಂತಹ ಎಡವಾದಿ ಪಕ್ಷಗಳು ಕೆಲವು ಎಂಪಿ ಸೀಟುಗಳ ಆಸೆಗೆ ಇಂಡಿಯಾ ಮೈತ್ರಿಕೂಟವನ್ನು ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷವು ಶೋಷಿತ ಜನರ ನೈಜ ಹೋರಾಟದ ಪರ್ಯಾಯವಾಗಿ ತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ.
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ 2000ನೇ ವರ್ಷದಲ್ಲಿ ನಮ್ಮ ಪಕ್ಷದ ಸಂಸ್ಥಾಪಕರಾದ ಕಾಮೇಡ್ ಶಿವದಾಸ್ ಘೋಷ್ ಅವರ ಚಿಂತನೆಗಳಿಗೆ ಆಕರ್ಷಿತರಾಗಿ ಧಾರವಾಡದಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಪ್ರಾರಂಭದಲ್ಲಿ ಯುವಜನ ಸಂಘಟನೆ ಎಐಡಿವೈಓ ಜಿಲ್ಲಾ ನಾಯಕರಾಗಿ, ರಾಜ್ಯ ನಾಯಕರಾಗಿ ಧಾರವಾಡ, ಬೆಳಗಾವಿ ಸೇರಿದಂತೆ ಈ ವಿಭಾಗದಲ್ಲಿ ಯುವಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸತತವಾಗಿ ಹೋರಾಟಗಳಿಗೆ ನೇತೃತ್ವ ವಹಿಸಿದ್ದಾರೆ. ಪ್ರಾರಂಭದಿಂದಲೂ ಪಕ್ಷದ ಪೂರ್ಣಾವಧಿ ಕಾರ್ಯಕರ್ತರಾಗಿ ಯುವಜನರ, ರೈತ-ಕಾರ್ಮಿಕರ ಚಳುವಳಿಗಳಿಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಎಸ್.ಯು.ಸಿ.ಐ(ಸಿ) ಪಕ್ಷದ ಧಾರವಾಡ ಜಿಲ್ಲಾ ಕಾರ್ಯದರ್ಶಿಯಾಗಿ ಜಿಲ್ಲೆಯ ಜನಹೋರಾಟಗಳಿಗೆ ನೇತೃತ್ವ ವಹಿಸುತ್ತಿದ್ದಾರೆ. ರೈತ ಮುಂದಳ ಏಐಕೆಕೆಎಂಎಸ್ ನ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ, ಧಾರವಾಡ ಮುಂತಾದೆಡೆ ರೈತ ಚಳುವಳಿಗೆ ನಾಯಕತ್ವ ಕೊಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನರೇಗಾ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ, ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟಗಳಿಗೆ ನೇತೃತ್ವ ವಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಆಶಾ ಕಾರ್ಯಕರ್ತೆರ ಸಂಘದ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆಶಾ ಕಾರ್ಯಕರ್ತೆಯರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಗಳನ್ನು ಬೆಳೆಸಿದ್ದಾರೆ. ಕೊಳಗೇರಿಗಳಲ್ಲಿ ವಾಸಿಸುವ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ವರ್ಷಗಳು ನಡೆದ ಹೋರಾಟಗಳಿಗೆ ನೇತೃತ್ವ ವಹಿಸಿದ್ದರು.
ಇಂತಹ ಜನಪರ ಹೋರಾಟಗಾರನನ್ನು ಜಿಲ್ಲೆಯ ಪ್ರಜ್ಞಾವಂತ ಮತದಾರರು ಬೆಂಬಲಿಸಬೇಕೆಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ, ಮುಖಂಡರಾದ ಲಕ್ಕಪ್ಪ ಬಿಜ್ಜನ್ನವರ ಹಾಗೂ ರಾಜು ಗಾಣಗಿ ಉಪಸ್ಥಿತಿರಿದ್ದರು.