23/12/2024
img-20240511-wa00055298414387079779176.jpg

ಬೆಳಗಾವಿ-೧೧: ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುತ್ತಿದ್ದು, ಶನಿವಾರವೂ ಮುಂದುವರಿದಿದೆ. ಮಧ್ಯಾಹ್ನದ ವೇಳೆಗೆ ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳೂ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಮೂರ್ನಾಲ್ಕು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಭಾರಿ ಮಳೆ ಸುರಿಯಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆಯಿತು. ಕೆಲವು ಪ್ರದೇಶಗಳಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಹೀಗಾಗಿ ಇದೀಗ ಮುಂಗಾರು ಹಂಗಾಮಿಗೆ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಅದೃಷ್ಟವಶಾತ್, ಈವರೆಗೆ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಚಿಕ್ಕಮಗಳೂರಿನಲ್ಲಿ ಕೂಡ ಬಿರುಗಾಳಿ ಸಮೇತ ಧಾರಾಕಾರ ಮಳೆ ಆರಂಭವಾಗಿದೆ. ಜಿಲ್ಲೆಯ ಜಯಪುರ, ಎನ್​ಆರ್​​ ಪುರ ಹಾಗೂ ಮೂಡಿಗೆರೆಯಲ್ಲಿ ಮಳೆಯಾಗಿದೆ. ಮತ್ತೊಂದೆಡೆ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೂಡ ಭಾರಿ ಮಳೆ ಸುರಿದಿದೆ. ಕಳೆದ 20 ನಿಮಿಷದಿಂದ ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಪೆರೆದ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯಾಹ್ನ ಭಾರಿ ಮಳೆ ಸುರಿಯಿತು. ಗಾಳಿ, ಗುಡುಗು ಸಹಿತ ಸುಮಾರು ಅರ್ಧಗಂಟೆಗಳ ಮಳೆಯಾಯಿತು. ಈ ಮಧ್ಯೆ, ಬೆಂಗಳೂರಿನಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

error: Content is protected !!