ಗದಗ-೧೮: ಹುಲಿಗೆಮ್ಮ ದೇವಿಯ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ಹಿಂಬದಿಯಿಂದ ಬಂದ ಖಾಸಗಿ ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕರಮುದ್ದಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಎಂದು ಗುರುತಿಸಲಾಗಿದೆ.
ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ತಡರಾತ್ರಿಯ ವೇಳೆಗೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.