ಬೆಳಗಾವಿ-೨೩: ಮಳೆಗಾಲ ಆರಂಭಗೊಳ್ಳಲಿರುವುದರಿಂದ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜಗಳ ಸಮರ್ಪಕ ವಿತರಣೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬರ ನಿರ್ವಹಣೆ ಹಾಗೂ ಮಳೆಗಾಲದ ಸಿದ್ಧತೆ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಗುರುವಾರ ವಿಡಿಯೋ ಸಂವಾದ ನಡೆಸಿದ ಬಳಿಕ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಬೀಜ ವಿತರಣಾ ಕೇಂದ್ರಗಳಿಗೆ ರೈತರು ಏಕಕಾಲಕ್ಕೆ ಆಗಮಿಸಿದಾಗ ಬೀಜ-ಗೊಬ್ಬರ ವಿತರಣೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು. ಸರದಿಯ ಪ್ರಕಾರ ಟೋಕನ್ ವಿತರಿಸುವ ಮೂಲಕ ಅನಗತ್ಯ ಗದ್ದಲ-ಗೊಂದಲಗಳಿಗೆ ಕಡಿವಾಣ ಹಾಕಬೇಕು. ಅಗತ್ಯವಿದ್ದರೆ ಹೆಚ್ಚುವರಿ ವಿತರಣಾ ಕೇಂದ್ರಗಳನ್ನು ಆರಂಭಿಸಬೇಕು.
ಆಯಾ ಬೀಜ ವಿತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಬೀಜ ದಾಸ್ತಾನು ಕುರಿತು ರೈತರಿಗೆ ಮಾಹಿತಿಯನ್ನು ನಿರಂತರವಾಗಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿಸರು.
ಕಲುಷಿತ ನೀರಿನಿಂದ ಆರೋಗ್ಯ ಸಮಸ್ಯೆ ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವಾಗ ಕಡ್ಡಾಯವಾಗಿ ನೀರಿನ ಗುಣಮಟ್ಟವನ್ನು ಪರೀಕ್ಷೆ ನಡೆಸಬೇಕು ಎಂದು ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವಂತೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು; ಜಾನುವಾರುಗಳಿಗೆ ಮೇವು; ರೈತರಿಗೆ ಬಿತ್ತನೆ ಬೀಜ-ಗೊಬ್ಬರದ ಕೊರತೆಯಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ಇದಲ್ಲದೇ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ವಾರಸುದಾರರಿಗೆ ಯಾವುದೇ ರೀತಿಯ ವಿಳಂಬವಿಲ್ಲದೇ ಆದಷ್ಟು ಬೇಗನೇ ಪರಿಹಾರ ಒದಗಿಸಬೇಕು ಎಂದು ಉಪ ವಿಭಾಗಾಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಈ ಬಾರಿ ಮಳೆ ಜಾಸ್ತಿಯಾಗುವ ಮುನ್ಸೂಚನೆ ಇರುವುದರಿಂದ ನದಿ ತೀರ ಪ್ರದೇಶಗಳಲ್ಲಿ ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಪಿ.ಎನ್.ಲೋಕೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ರಾಜೀವ್ ಕೂಲೇರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.