ಬೆಳಗಾವಿ-೧೯: ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಕಛೇರಿಗೆ ಸಂಸದರಾದ ಶ್ರೀ. ಜಗದೀಶ ಶೆಟ್ಟರ ಇವರು ಭೇಟಿನೀಡಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸದರಿ ಸಭೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವರವನ್ನು ಹಾಗೂ ಸಧ್ಯದ ಸ್ಥಿತಿಗತಿಯ ಮಾಹಿತಿಯನ್ನು ಸಂಸದರು ಪಡೆದುಕೊಂಡರು. ಇದಲ್ಲದೇ ಈಗಾಗಲೇ ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿದ್ದು ಮಹಾನಗರ ಪಾಲಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕಾಮಗಾರಿಗಳನ್ನು ಕೂಡಲೇ ಹಸ್ತಾಂತಗೊಳಿಸಬೇಕೆಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಶ್ರೀ. ಅಭಯ ಪಾಟೀಲ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನವನಿರ್ವಾಚಿತ ಸಂಸದರಿಗೆ ಬೆಳಗಾವಿ ಸ್ಮಾರ್ಟ್ ಸಿಟಿ ವತಿಯಿಂದ ಸನ್ಮಾನಿಸಲಾಯಿತು. ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ. ಸಯೀದಾ ಆಫ್ರೀನ್ ಬಾನು ಬಳ್ಳಾರಿ ಅವರು ಸಂಸದ ಮತ್ತು ಶಾಸಕರನ್ನು ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಪ್ರಗತಿ ಪರಿಶೀಲನಾ ಸಭೆಯ ನಂತರ ಸಂಸದರು ಸ್ಮಾರ್ಟ್ ಸಿಟಿ ವತಿಯಿಂದ ಅಭಿವೃದ್ಧಿಪಡಿಸಲಾದ ಡಿಜಿಟಲ್ ಗ್ರಂಥಾಲಯ, ಮಹಾತ್ಮಾ ಫುಲೆ ಉದ್ಯಾನ, ಕಲಾಮಂದಿರ ಮತ್ತು ಸಿ.ಬಿ.ಟಿ ಕಾಮಗಾರಿಗಳಿಗೆ ಭೇಟಿನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಸಯೀದಾ ಆಫ್ರೀನ್ ಬಾನು ಬಳ್ಳಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಜರಿದ್ದರು.