ಬೆಳಗಾವಿ-05: ಪರಿಶಿಷ್ಟ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಯ ಯೋಜನೆಗಳಿಗೆ ಬಿಡುಗಡೆಯಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡುವ ಮೂಲಕ ಶೇ.100 ರಷ್ಟು ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ. ಯೋಜನೆಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಆರ್ಥಿಕ ವರ್ಷದ ಅನುಮೋದಿತ ಕ್ರಿಯಾ ಯೋಜನೆಯ ಅನುಸಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಕಾಲದಲ್ಲಿ ಪೂರ್ಣಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಬೇಕು ಎಂದರು.
ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದಲ್ಲಿ ಎಸ್.ಸಿ.ಪಿ. ಯೋಜನೆಯಡಿ ರಸ್ತೆ ನಿರ್ಮಿಸಿಕೊಡಬೇಕು ಎಂಬುದು ಹಲವಾರು ದಿನಗಳ ಬೇಡಿಕೆಯಾಗಿದೆ. ಆದ್ದರಿಂದ ಪಂಚಾಯತಿ ರಾಜ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಸದರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ್ ಕಂಕಣವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜ ಕುರಿಹುಲಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.