ಬೆಳಗಾವಿ-03 : ಸರಕಾರ ಪ್ರವಾಹ ಸಂತ್ರಸ್ತರ ಜೊತೆಗಿದೆ. ಅವರಿಗೆ ಎಲ್ಲ ರೀತಿಯಲ್ಲೂ ನೆರವು ನೀಡಲಾಗುವುದು. ಯಾರೂ ಎದೆಗುಂದಬೇಕಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.
ಶನಿವಾರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳಗಾ (ಯು), ಅತವಾಡ, ಬಸುರ್ತೆ, ಬೆಕ್ಕಿನಕೇರಿ, ಬೆಳಗುಂದಿ, ಸೋನೋಲಿ, ಕೊನೆವಾಡಿ, ರಾಕಸಕೊಪ್ಪ, ಯಳೆಬೈಲ್, ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅವರು ಜನರಿಗೆ ಅಭಯ ನೀಡಿದರು. ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಸಾಕಷ್ಟು ಸಮಸ್ಯೆಯಾಗಿದೆ. ಅನೇಕ ಕಡೆ ಮನೆ ಬಿದ್ದಿದೆ, ಆಸ್ತಿಪಾಸ್ತಿ ಹಾನಿಯಾಗಿದೆ. ಎಲ್ಲರಿಗೂ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಲಾಗುವುದು. ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಖಾನಾಪುರ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಸಮೀಕ್ಷೆ ನಡೆಸಿದ್ದು, ಎರಡೂ ಕ್ಷೇತ್ರ ಸೇರಿ 50ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಈ ಕುರಿತು ಕಂದಾಯ ಸಚಿವರಿಗೆ ಸಮಗ್ರ ವರದಿ ನೀಡಲಾಗುವುದು. ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗುವುದು. ವಯಕ್ತಿಕವಾಗಿ ಮತ್ತು ಸರಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಬೆಳಗ್ಗೆ ಕೊನೆವಾಡಿ, ಬಸುರ್ತೆ, ಬೆಕ್ಕಿನಕೇರಿ ಗ್ರಾಮಗಳಿಗೆ ಭೇಟಿ ನೀಡಿದ್ದ ಸಚಿವರು, ಮಧ್ಯಾಹ್ನ ನಂತರ ಅತವಾಡ, ಸುಳಗಾ (ಯು), ಬೆಳಗುಂದಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಹಾನಿಗೊಳಗಾದ ಸ್ಥಳಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಪ್ರವಾಹದಿಂದ ಮನೆ ಕಳೆದುಕೊಂಡ ಕುಟುಂಬಗಳನ್ನು ಭೇಟಿ ಮಾಡಿ, ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.