ಹೆಲ್ಮೆಟ್ ವಿತರಣೆ; ಜಾಗೃತಿ ಮೂಡಿಸಿದ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ-೧೬: ಬೆಳಗಾವಿಯಲ್ಲಿ ನಡೆದ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಿಂದ ಆಯೋಜಿಸಲಾದ ವಿನೂತನ ಹೆಲ್ಮೆಟ್ ಜಾಗೃತಿ ಕಾರ್ಯಕ್ರದಲ್ಲಿ ಪಾಲ್ಗೊಂಡು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದರ ಮೂಲಕ ಅಪಘಾತದ ವೇಳೆ ತಮಗೆ ಹಾಗೂ ತಮ್ಮ ಕುಟುಂಬಸ್ಥರಿಗೆ ಎದುರಾಗುವ ಸಂಕಷ್ಟದಿಂದ ಸುರಕ್ಷಿತವಾಗಿರಬಹುದು ಎಂದು ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್,
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪೊಲೀಸ್ ಸಿಬ್ಬಂದಿಗಳಿಗೆ ಒಂದು ಸಾವಿರ ಹೆಲ್ಮೆಟ್ ಗಳನ್ನು ವಿತರಿಸಿದರು.
ಈ ವೇಳೆ ಡಿಸಿಪಿ ರೋಹನ್ ಜಗದೀಶ್ ಅವರು ಹೆಲ್ಮೆಟ್ ಬಳಕೆಯ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಮೊಹ್ಮದ ರೋಷನ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. ಪೊಲೀಸ್ ಇಲಾಖೆ ಸಿಬ್ಬಂದಿಗಳು, ಸಂಚಾರಿ ಪೊಲೀಸರು ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೆಲ್ಮೆಟ್ ವಿತರಣೆ ಕಾರ್ಯಕ್ರಮದ ಬಳಿಕ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಚಾಲನೆ ಮಾಡುತ್ತಿದ್ದ ಬುಲೆಟ್ ಏರಿ ಹೆಲ್ಮೆಟ್ ಧರಿಸಿ ನಗರದಲ್ಲಿ ಸಂಚರಿಸುವ ಮೂಲಕ ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು.
ಜಾಗೃತಿ ರ್ಯಾಲಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು, ಕೃಷ್ಣದೇವರಾಯ ಸರ್ಕಲ್, ರಾಣಿ ಚನ್ನಮ್ಮ ವೃತ್ತ, ಕೋರ್ಟ್ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತಕ್ಕೆ ತಲುಪಿ ಕೊನೆಗೊಂಡಿತು.