ಬೆಳಗಾವಿ-೧೯:ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ, ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಇದಕ್ಕೂ ಮೊದಲು ಆರ್ ಟಿ ಓ ವೃತ್ತ ದಲ್ಲಿರುವ ಕಾಂಗ್ರೆಸ್ ಭವನದಿಂದ ಡಿ.ಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೇ ರಾಜ್ಯಪಾಲರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಕ್ರೋಶ ಹೊರಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಸಿಎಂ ವಿರುದ್ಧ ಸುಳ್ಳು ಆರೋಪ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಪ್ರತಿಭಟನೆ ನಡೆಸಿದ ನಡೆಸಿ ಕೈ ಕಾರ್ಯಕರ್ತರು ರಾಜ್ಯಪಾಲರು, ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶಗೊಂಡರು. ಅಲ್ಲದೆ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಗೆಲುವಾಗಲಿದ್ದು, ರಾಜ್ಯಪಾಲರಿಗೆ ಮುಖಭಂಗ ನಿಶ್ಚಿತ ಎಂದು ಘೋಷಣೆ ಮೊಳಗಿಸಿದರು.
ಈ ವೇಳೆ ಶಾಸಕ ಆಸೀಫ್( ರಾಜು) ಸೇಠ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗಾಗಿ ಮೊದಲಿನಿಂದಲೂ ಹುನ್ನಾರ ನಡೆದಿತ್ತು. ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯುವ ಕುತಂತ್ರ ನಡೆದಿತ್ತು. ಅದರ ಫಲವೆಂಬಂತೆ ಇದೀಗ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆ ಖಂಡನೀಯ ಎಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಕೊಡುತ್ತಿರುವ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಪಿತೂರಿ ಮಾಡಿ ಕರ್ನಾಟಕ ಸರ್ಕಾರ ಬುಡಮೇಲು ಮಾಡಲು ಯತ್ನಿಸುತ್ತಿದೆ. ಇದು ಸಂವಿಧಾನ ವಿರೋಧಿ ನಡೆ. ರಾಜ್ಯಪಾಲರಿಗೆ ಕಾನೂನಿನ ಹೋರಾಟದಲ್ಲಿ ಸೋಲಾಗಲಿದೆ. ಜನ ಬಿಜೆಪಿ ವಿರುದ್ಧ ದಂಗೆ ಏಳುವುದು ನಿಶ್ಚಿತ ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಯಾವುದೇ ಗುರುತರವಾದ ಆರೋಪಗಳು ಇಲ್ಲದಿದ್ದರು ಸಹ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಅವರ ವಿರುದ್ಧ ಪ್ರಕರಣ ದಾಖಲಿಸಲು ಪೂರ್ವಾನುಮತಿ ನೀಡಿರುವುದು ಖಂಡನೀಯ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಹಿಂದುಳಿದ ವರ್ಗದವರು ಎಂಬ ಏಕೈಕ ಕಾರಣಕ್ಕೆ ಅವರ ವಿರುದ್ದ ಇಲ್ಲ ಸಲ್ಲದ ಆರೋಪಗಳನ್ನು ಪ್ರತಿಪಕ್ಷಗಳು ಮಾಡುತ್ತಿವೆ. ಬಿಜೆಪಿ ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪಗಳು ಶುದ್ದ ಸುಳ್ಳು. ಕೇಂದ್ರ ಸರ್ಕಾರ ಬಿಜೆಪಿಯೇತರ ಸರ್ಕಾರಗಳಿಗೆ ನಿರಂತರ ತೊಂದರೆ ನೀಡುವ ಪರಿಪಾಠವನ್ನು ಬೆಳೆಸಿಕೊಂಡಿವೆ. ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಮಹಾನಗರ ಪಾಲಿಕೆ ಸದಸ್ಯ ಅಜೀಂ ಪಟ್ಟೆದಾರ್, ಮೃಣಾಲ್ ಹೆಬ್ಬಾಳಕರ, ರಾಜಾ ಸಲೀಂ, ಅರವಿಂದ ಕಾರ್ಚಿ, ಮಲ್ಲೇಶ್ ಚೌಗಲೆ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.