ಬೆಳಗಾವಿ-೨೬: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ ಬೇಡವೇ ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಪರ ಇರುವುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡುವ ಕುರಿತು ಶಾಸಕರ ಜತೆ ಮಾತುಕತೆ ನಡೆಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.