ಬೆಳಗಾವಿ-10: ಪ್ರತಿವರ್ಷದಂತೆ ಜನವರಿ 26 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಧ್ವಜಾರೋಹಣ ಸಮಯದಲ್ಲಿ ಕಡ್ಡಾಯವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆ, ಅಗ್ನಿಶಾಮಕ, ಕೆ.ಎಸ್.ಆರ್. ಪಿ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಪರೇಡ್ ನಲ್ಲಿ ಭಾಗವಹಿಸುವವರು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಕೆ.ಎಂ.ಎಫ್ ಹಾಗೂ ಮಿಠಾಯಿ ಅಸೋಸಿಯನ್ ವತಿಯಿಂದ ಪರೇಡ್ ನಲ್ಲಿ ಭಾಗವಹಿಸಿದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಿಠಾಯಿ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.
ವೇದಿಕೆಯ ಸಿದ್ಧತೆ, ಆಸನ, ಧ್ವನಿವರ್ಧಕ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹೇಳಿದರು.
ಅಂದು ಬೆಳಿಗ್ಗೆ ಜಿಲ್ಲೆಯ ಎಲ್ಲ ದೇವಾಲಯ, ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿಗಳಿಗೂ ಕೂಡ ದೀಪಾಲಂಕಾರ ಮಾಡಬೇಕು. ಸಾರ್ವಜನಿಕರು ತಮ್ಮ ಮನೆ, ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಬೇಕು ಎಂದು ತಿಳಿಸಿದರು.
ಗಣರಾಜ್ಯೋತ್ಸವ ದಿನ ಆಸಕ್ತ ಸಂಘ-ಸಂಸ್ಥೆಗಳು ಆಸ್ಪತೆಯ ರೋಗಿಗಳಿಗೆ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಹಣ್ಣುಗಳನ್ನು ಹಂಚಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ರಾಯಣ್ಣ ಮೂರ್ತಿ ಸ್ಥಳಾಂತರಕ್ಕೆ ಮನವಿ:
ಚನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಮಾಡಲಾಗುತ್ತಿದೆ. ನಗರದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ, ರಸ್ತೆ, ಮೂರ್ತಿ ಬೇರೆ ಬೇರೆ ಸ್ಥಳಗಳಲ್ಲಿವೆ. ಕೋರ್ಟ್ ಆವರಣದ ಹಿಂಬದಿಯಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಪ್ರಾದೇಶಿಕ ಆಯುಕ್ತರ ಕಚೇರಿಯ ಮುಂದೆ ಸ್ಥಳಾಂತರ ಮಾಡಬೇಕು ಎಂದು ಮುಖಂಡರಾದ ಶ್ರೀನಿವಾಸ ತಾಳೂರಕರ ಮನವಿ ಮಾಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಾಣ, ಫ್ಲೈಓವರ್, ಹೊಸ ಜಿಲ್ಲಾಡಳಿತ ಕಟ್ಟಡ ಸೇರಿದಂತೆ ವಿವಿಧ ಯೋಜನೆಗಳು ರೂಪಿಸಲಾಗಿದೆ. ಇದಕ್ಕೆ ಅನುಗುಣವಾಗಿ ಮುಂದೆ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಕಳೆದ ಬಾರಿಯಂತೆ ಪರೇಡ್ ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಗುವುದು.
ಸಮೀಪದ ಶಾಲಾ ಕಾಲೇಜು ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವಂತೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ,
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ,
ಸ್ವಾತಂತ್ರ್ಯ ಯೋಧರಾದ ರಾಜೇಂದ್ರ ಕಲಘಟಗಿ,
ಮುಖಂಡರಾದ ಭಾವಕಣ್ಣ ಬಂಕ್ಯಾಗೊಳ, ಮಲ್ಲೇಶ ಚೌಗಲಾ, ಶ್ರೀನಿವಾಸ ತಾಳೂರಕರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ
ಸೇರಿಸಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.