ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ(ಪತ್ರಿಕೋದ್ಯಮ) ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.
ಗುರುವಾರ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ “ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು’ ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ.
ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ದಿನಾಂಕ:21/03/2024ರಲ್ಲಿದ್ದಂತೆ ಮಾಧ್ಯಮ ಪಟ್ಟಿಯಲ್ಲಿರುವ ಮುದ್ರಣ/ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯೆಯನ್ನಾಧರಿಸಿ, ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆಯನ್ನು ಒದಗಿಸಲು, ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ನೀಡಿರುವ ಅಂದಾಜಿನಂತೆ, ಪ್ರತಿ ಪಾಸುದಾರರಿಗೆ ಪ್ರತಿ ತಿಂಗಳಿಗೆ ರೂ.2500/- ಗಳಾಗಬಹುದೆಂದು ವೆಚ್ಚವನ್ನು ಅಂದಾಜಿಸಿಲಾಗಿದೆ ಎಂದು ತಿಳಿಸಲಾಗಿದೆ. ಸದರಿ ಲೆಕ್ಕಚಾರದಂತೆ ಪ್ರತಿ ತಿಂಗಳಿಗೆ ರೂ. 1,30,55,000/- ಹಾಗೂ ವಾರ್ಷಿಕ ಅಂದಾಜು ಅನುದಾನ ರೂ.15,66,60,000/-ಗಳ ಅವಶ್ಯಕತೆ ಇರುತ್ತದೆ ಎಂದು ಅಂದಾಜಿಸಲಾಗಿದೆ ಎಂದಿದ್ದಾರೆ.
ಮಾರ್ಗಸೂಚಿಗಳು: ಗ್ರಾಮೀಣ ಪತ್ರಕರ್ತರು ಬಸ್ ವಾಸ್ ಪಡೆಯುಲು ಈ ಕೆಳಕಂಡ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿದಾರರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಇರಬೇಕು.
* ಅರ್ಜಿದಾರರು ಪೂರ್ಣಾವಧಿಗೆ ನೇಮಕವಾಗಿದ್ದು ಕನಿಷ್ಟ ನಾಲ್ಕು, (4) ವರ್ಷಗಳಾಗಿರಬೇಕು. ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ಸೇವಾ ಅನುಭವ ಹೊಂದಿರಬೇಕು.
ಪೂರ್ಣಾವಧಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ, ನೇಮಕಾತಿ ಆದೇಶ, ವೇತನ ರಸೀತಿ/ಬ್ಯಾಂಕ್ ಸ್ನೇಟ್‌ಮೆಂಟ್ ಅಥವಾ ಸೇವಾನುಭವಕ್ಕೆ ಸಂಬಂಧಪಟ್ಟಂತೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು.
ಸಾಮಾನ್ಯ ಮನರಂಜನಾ ಹಾಗೂ ಇತರ ಪ್ರಕಾರಗಳ ವಾಹಿನಿಗಳ ಪ್ರತಿನಿಧಿಗಳಿಗೆ ಬಸ್ ಪಾಸ್ ಗಳನ್ನು ನೀಡಲಾಗುವುದಿಲ್ಲ.
ಈ ಯೋಜನೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ವ್ಯಾಪ್ತಿಯ (ಎಕ್ಸ್ ಪ್ರೆಸ್ ಸೇರಿದಂತೆ ಎಲ್ಲಾ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಲು ಸೀಮಿತಗೊಳಿಸಿದೆ.
ಆಸಕ್ತ ಪತ್ರಕರ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸಂಪಾದಕರ/ ಮುಖ್ಯಸ್ಮರ ಶಿಫಾರಸ್ಸಿನೊಂದಿಗೆ ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತಮ್ಮ ಕಾರ್ಯ ವ್ಯಾಪ್ತಿಯ ಜಿಲ್ಲಾ ಮಟ್ಟದ ಉಪ ನಿರ್ದೇಶಕರು/ಹಿರಿಯ ಸಹಾಯಕ ನಿರ್ದೇಶಕರು/ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಜಿಲ್ಲಾ ಕೇಂದ್ರಗಳಿಂದ ಈ ಸೌಲಭ್ಯಕ್ಕೆ ಆಯ್ಕೆಯಾದ ಪತ್ರಕರ್ತರ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕ್ರೋಢೀಕರಿಸಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ನೀಡಲಾಗುವುದು. ಸದರಿ ಸಂಸ್ಥೆಯು ಮುದ್ರಿಸಿಕೊಡುವ ಬಸ್‌ಪಾಸ್ ಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾ ಪತ್ರಿಕಾ ಸಂಪಾದಕರಿಗೆ/ವರದಿಗಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
ಈ ಎಲ್ಲಾ ಪ್ರಕ್ರಿಯೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಂಟಿ ನಿರ್ದೇಶಕರು (ಸುಮಪ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ) ಇವರುಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ
ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ವಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ, ಮಾಧ್ಯಮ ಮಾನ್ಯತಾ ಪತ್ರ ಪಡೆಯದ ಪತ್ರಕರ್ತರು, ಅವರು ಕಾರ್ಯನಿರ್ವಹಿಸುವ ಜಿಲ್ಲೆಯ ವ್ಯಾಪ್ತಿಯಲ್ಲಿ ಕರ್ನಾಟಕ ಸಾರಿಗೆ ವ್ಯಾಪ್ತಿಯ (ಎಕ್ಸ್ ಪ್ರೆಸ್ ಸೇರಿದಂತೆ ) ಬಸ್ ಗಳಲ್ಲಿ ಸಂಚರಿಸಲು ಬಸ್ ಪಾಸ್ ಅವಕಾಶ ಕಲ್ಪಿಸಿದೆ.
ಅರ್ಜಿದಾರರು ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ವನ್ನು ಸಲ್ಲಿಸುವುದು.