23/12/2024
IMG-20241130-WA0007

ತ್ವರಿತವಾಗಿ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

ತ್ರೈಮಾಸಿಕ ಕೆಡಿಬಿ ಸಭೆಯಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಮೇಲೆ ಬೆಳಕು ಚೆಲ್ಲಿದ ಸಚಿವರು

ಉಡುಪಿ-೩೦:ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಆದೇಶಿಸಿದರು.

ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ‌ ನಡೆದ ಸಭೆಯಲ್ಲಿ ಇಲಾಖಾವಾರು ಜಿಲ್ಲೆಯ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ಪಡೆದುಕೊಂಡರು. ಮಾಹಿತಿ ಕೊರತೆಯಿಂದ ಸಭೆಯಲ್ಲಿ ಉತ್ತರಿಸಲು ಪರದಾಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು.

ಕಿಂಡಿ‌ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಸಚಿವರು, ನಗರಾಭಿವೃದ್ಧಿ ಅನುದಾನ ದಲ್ಲಿ 15 ದಿನಗಳಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.

ಮೀನುಗಾರಿಕೆಗೆ ಅನುಕೂಲವಾಗುವ ಉದ್ದೇಶದಿಂದ ಹೆಜಮಾಡಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿ ಶೇಕಡ 80 ರಷ್ಟು ಮುಕ್ತಾಯಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿ ಮುಕ್ತಾಯಗೊಳಿಸಲು ಸೂಚನೆ ನೀಡಿದರು.

*ಹೊಸ ಹಾಸ್ಟೆಲ್ ಗಳಿಗೆ ಬೇಡಿಕೆ*
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್ ಗಳು ಮಂಜೂರಾಗಿದ್ದು,‌ಹೆಚ್ಚುವರಿ ಹಾಸ್ಟೆಲ್ ಗಳನ್ನು ತೆರೆಯಲು ಸಭೆಯಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.

* *ಘನತಾಜ್ಯ‌ ವಿಲೇವಾರಿ*
ಗ್ರಾಮೀಣ ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸರಿಯಾಗಿ ಘನತಾಜ್ಯ ವಿಲೇವಾರಿ ಆಗುತ್ತಿಲ್ಲ. ಇದನ್ನೂ ಕೂಡಲೇ ಬಗೆಹರಿಸಿ, ಜಿಲ್ಲೆಯನ್ನು ತ್ಯಾಜ್ಯ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಜಿಲ್ಲೆಯಲ್ಲಿ ಜನ ಸಾಮಾನ್ಯರು ಮನೆಕಟ್ಟಲು ಅನುಮತಿ ಪಡೆಯಲು ತುಂಬಾ ತೊಂದರೆ ಅನುಭವಿಸುತ್ತಿದ್ದು, ವಿಶೇಷವಾಗಿ ಜಿಲ್ಲೆಯಲ್ಲಿ 9 ಅಂಡ್ 11 ಸಮಸ್ಯೆ ಇದ್ದು, ಆರ್‌ಡಿಪಿಆರ್, ಕಂದಾಯ, ನಗರಾಭಿವೃದ್ಧಿ ಇಲಾಖೆಗಳು ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು

ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್.ವಿ, ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೆಡಿಪಿ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!