ಬೆಳಗಾವಿ-೧೨:2ಎ ಮೀಸಲಾತಿಗಾಗಿ ಕುಡಲಸಂಗಮ ಗುರುಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಸುವರ್ಣ ಸೌಧವನ್ನು ಸುತ್ತುವರಿಯಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದನ್ನು ತೀವ್ರವಾಗಿ ಪ್ರತಿಭಟಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮಾಜದವರು ಗುರುವಾತ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಗುರುವಾರ ಬೆಳಗಾವಿಯ ಹಿರೇಬಾಗೇವಾಡಿ ಸುಂಕದಕಟ್ಟೆ ಬಳಿ ಪಂಚಮಸಾಲಿ ಸಮಾಜದ ಜನರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದ ನೀತಿಗಳನ್ನು ವಿರೋಧಿಸಿ ಖಂಡನಾ ಘೋಷಣೆಗಳನ್ನು ಕೂಗುವ ಮೂಲಕ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲಸಂಗಮ ಗುರುಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಪಂಚಮಸಾಲಿ ಸಮಾಜದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ. ಇಂದು ರಾಜ್ಯಾದ್ಯಂತ ಪಂಚಮಸಾಲಿ ಸಮಾಜದವರು ದಾಳಿಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಪಂಚಮಸಾಲಿ ಸಮಾಜದವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.
ಸೋಮವಾರ ಸುವರ್ಣ ಸೌಧದ ಎದುರು ಧರಣಿ ಸತ್ಯಾಗ್ರಹ ಆರಂಭವಾಗಲಿದೆ. ‘ಮೀಸಲಾತಿ ಕೊಡಿಸುತ್ತೇನೆ’ ಎಂದು ಮುಖ್ಯಮಂತ್ರಿಗಳು ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟವಾಗಿ ಮಾತನಾಡಬೇಕು. ಇಲ್ಲವಾದಲ್ಲಿ ನಾನು ಕೊಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಬೇಕು, ಆದರೆ ಈಗ ನಾವು ಮೀಸಲಾತಿಗೆ ಬೇಡಿಕೆ ಇಡುತ್ತಿಲ್ಲ, 2028ರಲ್ಲಿ ನಮಗೆ ಬೇಕಾದ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಸ್ವಾಮೀಜಿ ಹೇಳಿದರು.
ಈ ಪ್ರತಿಭಟನೆ ಯಲ್ಲಿ ಪಂಚಮಸಾಲಿ ಸಮಾಜದ ನೂರಾರು ಬಾಂಧವರು ಉಪಸ್ಥಿತರಿದ್ದರು.