11/12/2025
IMG-20240118-WA0030

ಜಿಲ್ಲೆಯಾದ್ಯಂತ ಸ್ತಬ್ಧಚಿತ್ರ ಸಂಚಾರ; ಅಗತ್ಯ ಸಿದ್ಧತೆಗೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಬೆಳಗಾವಿ-18: ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ “ಸಂವಿಧಾನ ಜಾಗೃತಿ ಜಾಥಾ” ನಡೆಯಲಿದ್ದು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ “ಸಂವಿಧಾನ ಜಾಗೃತಿ ಜಾಥಾ” ಸ್ತಬ್ಧಚಿತ್ರವು ಭೇಟಿ ನೀಡಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

IMG 20240118 WA0028 - IMG 20240118 WA0028

“ಸಂವಿಧಾನ‌ ಜಾಗೃತಿ ಜಾಥಾ” ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ವಿಡಿಯೋ ಸಂವಾದದ ಬಳಿಕ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಗಣರಾಜ್ಯೋತ್ಸವ ದಿನ(ಜ.26)ದಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು “ಸಂವಿಧಾನ ಜಾಗೃತಿ ಜಾಥಾ” ಗೆ ಚಾಲನೆ ನೀಡಲಿದ್ದಾರೆ.
ಜಾಗೃತಿ ಜಾಥಾದ ಸ್ತಬ್ಧಚಿತ್ರವು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮತ್ತು ಇತರೆ ಸರಕಾರಿ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಅರಿವು ಮೂಡಿಸಲಿದೆ.

ಹೀಗೆ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸ್ತಬ್ಧಚಿತ್ರವು ಫೆ.25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಒಂದು ತಿಂಗಳುಗಳ ಕಾಲ ನಡೆಯಲಿರುವ ಜಾಥಾ ಯಶಸ್ವಿಗೊಳಿಸಲು ಜಿಲ್ಲಾ ಪಂಚಾಯತಿ, ಕಂದಾಯ, ಪೊಲೀಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು.
ಜಿಲ್ಲೆಯಲ್ಲಿ ಸಂಚರಿಸಲಿರುವ ಸ್ತಬ್ಧಚಿತ್ರವು ಬೆಂಗಳೂರಿನ ಅರಮನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದರಿಂದ ಜಾಥಾವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ‌ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಸಂವಿಧಾನ ಜಾಗೃತಿ ಜಾಥಾವು ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿರುವುದರಿಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಸಂವಿಧಾನ ಜಾಗೃತಿ ಜಾಥಾದ ವೇಳಾಪಟ್ಟಿಯನ್ನು ಮುಂಚಿತವಾಗಿ ನೀಡಲಾಗುವುದು. ಆಯಾ ಗ್ರಾಮ ಪಂಚಾಯಿತಿಗೆ ಸ್ತಬ್ಧಚಿತ್ರ ಆಗಮಿಸಿದಾಗ ಪಿಡಿಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಅದನ್ನು ಬರಮಾಡಿಕೊಂಡು ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ ಕಲಾದಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ರಾಜಶ್ರೀ ಜೈನಾಪುರ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!